ಭದ್ರತೆ ನೀಡಲು ಕೇಂದ್ರ ವಿಫಲ: ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

Aam Aadmi Party

Share this post :

coorg buzz

ಮಡಿಕೇರಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಾರ್ಟಿಯ (Aam Aadmi Party) ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಅಮಾಯಕರ ಸಾವಿಗೆ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.

ಕಳೆದ 11 ವರ್ಷಗಳಿಂದ ಭಯೋತ್ಪಾದಕರ ದಾಳಿಯಿಂದ ಭಾರತ ಮುಕ್ತವಾಗಿಲ್ಲ. ಕೇಂದ್ರ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಭದ್ರತಾ ಲೋಪ ಎದ್ದು ಕಾಣುತ್ತಿದ್ದು, ಗಡಿಯಲ್ಲಿ ನುಸುಳುಕೋರರು ಸುಲಭವಾಗಿ ದೇಶವನ್ನು ಪ್ರವೇಶಿಸುತ್ತಿದ್ದಾರೆ ಎನ್ನುವ ಸಂಶಯ ಮೂಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜಮ್ಮು ಕಾಶ್ಮೀರ ಸೇರಿದಂತೆ ಭಾರತ ದೇಶ ಭಯೋತ್ಪಾದಕರಿಂದ ಮುಕ್ತವಾಗಿದೆ ಎಂದು ಹೇಳಿಕೊಳ್ಳುವ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ವೈಫಲ್ಯದ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.