ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ 11 ಸಾವು: ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

Chinnaswamy Stadium

Share this post :

ಬೆಂಗಳೂರು: ಐಪಿಎಲ್ 2025ರ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ, ಇಂತಹ ದುರಂತ ನಡೆಯಬಾರದಿತ್ತು. ಸರ್ಕಾರ ಇದಕ್ಕೊಸ್ಕರ ದು:ಖ ವ್ಯಕ್ತಪಡಿಸುತ್ತದೆ. ನಿರೀಕ್ಷೆ ಮೀರಿ ಜನ ಅಭಿಮಾನಿಗಳು ಸೇರಿದ್ದರು. ವಿಧಾನಸೌಧದ ಎದುರುಗಡೆ 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮ ವೇಳೆ ಯಾವುದೇ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಆಗಿದೆ. ಯಾರು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಮಾಡಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದೇನೆ, ತಮ್ಮವರನ್ನು ಕಳೆದುಕೊಂಡವರನ್ನು ಸಂತೈಸಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಈ ಘಟನೆಯ ಬಗ್ಗೆ ನಮಗೆ ಮರುಕವಿದೆ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಕ್ರಿಕೆಟ್ ಅಸೋಸಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆಯಷ್ಟೇ.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು, ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.