ಕೊಡಗು ಜಿಲ್ಲಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಯೋಗದ ಮಹತ್ವ ವಿವರಿಸಿದ ಗಣ್ಯರು..!

Share this post :

ಮಡಿಕೇರಿ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ೧೧ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಜೊತೆಗೆ ಮಾನಸಿಕವಾಗಿಯೂ ಸಹ ಸದೃಢರಾಗಿರಬಹುದು ಎಂದರು.
ಯೋಗ ಶಿಕ್ಷಕ ಕೆ.ಕೆ. ಮಹೇಶ್ ಕುಮಾರ್ ಯೋಗಾಭ್ಯಾಸದ ಪ್ರಾತ್ಯಕ್ಷಿಕೆ ನೀಡಿದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉರ್ದ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟಾçಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿ ಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಶೈಲಜಾ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ರಾಮಚಂದ್ರ ಕಾಮತ್ ಮುಂತಾದವರಿದ್ದರು.

coorg buzz
coorg buzz