ಮಾರ್ಚ್ 18 ರಿಂದ SSLC ಪರೀಕ್ಷೆ

SSLC exam

Share this post :

ಇದೇ ಮಾರ್ಚ್, 18 ರಿಂದ ಏಪ್ರಿಲ್, 02 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಷಷ್ಟ ನಿರ್ದೇಶನ ನೀಡಿದ್ದಾರೆ.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.

ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್‍ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜೊತೆಗೆ ಸಿಸಿಟಿವಿ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆಯೇ ಎಂದು ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಲೋಪಕಂಡು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾರ್ಚ್, 18 ರಿಂದ ಏಪ್ರಿಲ್, 02 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು. ಇವರಲ್ಲಿ ಬಾಲಕರು 3,049, ಹಾಗೆಯೇ ಬಾಲಕಿಯರು 3,134 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ 399 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ 8, ವಿರಾಜಪೇಟೆ 8 ಹಾಗೂ ಸೋಮವಾರಪೇಟೆ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಬಸವರಾಜು ಅವರು ವಿವರಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಕುಡಿಯುವ ನೀರಿನ ಸೌಲಭ್ಯ, ಬೆಳಕಿನ ವ್ಯವಸ್ಥೆ, ಶೌಚಾಲಯ, ಶುಶ್ರೂಷಕರ ನೇಮಕ, ಪೊಲೀಸರ ನಿಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದರು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ವಿದ್ಯಾರ್ಥಿಗಳು ಶ್ರಮಪಟ್ಟು ಓದಿರುತ್ತಾರೆ. ಅವರಿಗೆ ಅನ್ಯಾಯ ಆಗದಂತೆ ಗಮನಹರಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಂದಣಿಯಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಮಾಹಿತಿ ನೀಡುವಂತಾಗಬೇಕು ಎಂದರು. ಪರೀಕ್ಷೆ ಎಂದರೆ ಭಯದ ವಾತಾವರಣ ನಿರ್ಮಾಣ ಮಾಡಬಾರದು. ಪಠ್ಯ ಪುಸ್ತಕ ಓದಿದವರು ಯಾವುದೇ ರೀತಿಯ ಒತ್ತಡ ಇಲ್ಲದೆ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿಸಿದರು. ವಸತಿ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಬಿಂದು ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಇಂಟರ್‍ನೆಟ್ ಸಂಪರ್ಕ ಸಹಿತ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು. ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸ್ಥಾನಿಕ ಜಾಗೃತ ದಳದ ಶಿಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಮಾರ್ಗಾಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು ಇತರರು ಇದ್ದರು.

ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಆರ್.ಮಹೇಶ್, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ.ಆನಂದ್, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ,್ಪ ಜಿಲ್ಲಾ ನೋಡಲ್ ಅಧಿಕಾರಿ ಕೆ.ಆರ್.ಬಿಂದು ಮತ್ತು ತಾಲೂಕು ನೋಡಲು ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಎಲ್ಲಾ ಕೇಂದ್ರಗಳ ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.

coorg buzz
coorg buzz