ವಿರಾಜಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Share this post :

ವಿರಾಜಪೇಟೆ: ಯುವಶಕ್ತಿಯು ದೇಶದ ಭವಿಷ್ಯವಾಗಿದ್ದು, ವಿದ್ಯಾರ್ಥಿಗಳು ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ನಿವೃತ್ತ ಪ್ರಾಂಶುಪಾಲ ತಾತಂಡ ಜ್ಯೋತಿ ಪ್ರಕಾಶ್ ಕರೆ ನೀಡಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಸಂಘವು ನಾಯಕತ್ವದ ಮನೋಭಾವನೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಶೈಕ್ಷಣಿಕ ಮತ್ತು ಪಠ್ಯೇತರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಪೆರಿಗ್ರಿನ್ ಮಚ್ಚಾಡೋ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಆಂತರಿಕ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ಹೊರಹೊಮ್ಮಬೇಕು ಎಂದರು. ಪ್ರಾಂಶುಪಾಲರಾದ ರೈಮಂಡ್ ಎಸ್.ಪಿ. ಅವರು ಮಾತನಾಡಿ, ನಾಯಕತ್ವ ಎಂಬುದು ಕೇವಲ ಅಧಿಕಾರವಲ್ಲ, ಬದಲಾಗಿ ಅದೊಂದು ಬಹುದೊಡ್ಡ ಜವಾಬ್ದಾರಿ. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪೀಳಿಗೆಯ ಶಕ್ತಿಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ಕಾಲೇಜು ಹಂತದಲ್ಲೇ ಮೈಗೂಡಿಸಿಕೊಳ್ಳುವ ನಾಯಕತ್ವದ ಗುಣಗಳು ಯುವಜನತೆಯನ್ನು ಭವಿಷ್ಯದಲ್ಲಿ ಸಮಾಜದ ಮಾದರಿ ಪ್ರಜೆಗಳನ್ನಾಗಿ ರೂಪಿಸುತ್ತವೆ ಎಂದರು. ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಅರ್ಥಶಾಸ್ತ್ರ ಉಪನ್ಯಾಸಕ ತಿಮ್ಮಯ್ಯ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಉಪನ್ಯಾಸಕಿ ಪವಿತ್ರಕುಮಾರಿ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕಿ ಸುಮಲತಾ ಸ್ವಾಗತಿಸಿ, ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಸಿಮ್ರನ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

coorg buzz
WhatsApp Image 2026-08-11 at 16.11.22