ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರತ್ತ ಬಿಜೆಪಿ ನಾಯಕರು ಬೊಟ್ಟು ಮಾಡುತ್ತಿದ್ದಾರೆ ಮತ್ತು ತನಿಖೆಗೆ ಆಗ್ರಹಿಸಿದ್ದಾರೆ.
ಆತ್ಮಹತ್ಯೆಗೆ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಕಾರಣ ಎಂದು ಅವರು ಡೆತ್ ನೋಟ್ನಲ್ಲಿ ಆರೋಪಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ ಜೀವನ್ ಅವರು ಕಾಂಗ್ರೆಸ್ ಮುಖಂಡ ತೆನ್ನೀರಾ ಮೈನಾ, ಶಾಸಕರಾದ ಎ.ಎಸ್.ಪೊನ್ನಣ್ಣ (A S Ponnanna) ಹಾಗೂ ಮಂಥರ್ ಗೌಡ (Manthar Gowda) ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತೆನ್ನೀರ ಮಹೀನ ವಿರುದ್ಧ FIR ದಾಖಲಾಗಿದೆ.
ಈ ಕುರಿತಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ’ ಎಂದಿದ್ದಾರೆ.
ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ ಆಗ್ರಹಪಡಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.