ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Share this post :

ವಿರಾಜಪೇಟೆ: ಪ್ರತಿಯೊಬ್ಬರು ರಕ್ತದಾನವನ್ನು ಸಾಮಾಜಿಕ ಜವಾಬ್ದಾರಿ ಎಂದು ಅರಿತುಕೊಳ್ಳಬೇಕು ಎಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಕರುಂಬಯ್ಯ ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್ ಎಸ್ ಎಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾಸ್ಪತ್ರೆ ಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಾಮಾಜಿಕ ಜವಾಬ್ದಾರಿ ಹಾಗೂ ಆರೋಗ್ಯ ಜಾಗೃತಿ ಅತೀ ಮುಖ್ಯವಾಗಿದ್ದು ವಿದ್ಯಾರ್ಥಿ ಹಂತದಿಂದಲೇ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಯುವಜನರು ಪಣ ತೊಡಬೇಕು ಎಂದರು. ಇಂದು ವಿಶ್ವ ಹಿಮೋಫಿಲಿಯ ದಿನವಾಗಿದ್ದು ಹಿಮೋಫಿಲಿಯ ಪೀಡಿತರಿಗೆ ಚುಚ್ಚು ಮದ್ದನ್ನು ನೀಡುವ ಕಾರ್ಯವು ನಡೆಯುತಿದೆ. ಜನರು ಆರೋಗ್ಯ ಜಾಗೃತಿಯನ್ನು ವಹಿಸಬೇಕು.ರಕ್ತದಾನವನ್ನು ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು, ರಕ್ತ ಡೊತ್ತಡ ಇನ್ನೂ ಮುಂತಾದ ಸಮಸ್ಯೆಗಳನ್ನು ತಡೆಗಟ್ಟು ಸಾಧ್ಯವಾಗುತ್ತದೆ ಎಂದು ಹೇಳಿ ರಕ್ತದಾನ ಮಾಡುವ ಹಂತಗಳು ಹಾಗೂ ಮಹತ್ವವನ್ನು ವಿವರಿಸಿದರು. ಇಂದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗಿರುವುದು ಅಭಿನಂದನಾರ್ಹ ಎಂದು ಹೇಳಿದರು.

ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ರವರು ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ.ಮದಲೈ ಮುತ್ತು ರವರು ಮಾತನಾಡಿ ರಕ್ತದಾನವು ಅತೀ ಶ್ರೇಷ್ಠ ದಾನವಾಗಿದ್ದು ಒಬ್ಬರ ಜೀವವನ್ನು ಉಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿಯೊಬ್ಬರು ತಮ್ಮ ಸಾಮಾಜಿಕ ಹೊಣೆ ಹಾಗೂ ಸಮಾಜದ ಕುರಿತು ಕಾಳಜಿಯನ್ನು ಹೊಂದುವುದರ ಮೂಲಕ ರಕ್ತದಾನವನ್ನು ಮಾಡಿ ಎಂದು ಹೇಳಿದರು. ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರತಿವರ್ಷವೂ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಒಳಗೊಂಡಂತೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು. ಕಾಲೇಜಿನ ಎನ್ ಎಸ್ ಎಸ್ ಘಟಕದ ಅಧಿಕಾರಿ ಬಿ. ಎನ್. ಶಾಂತಿಭೂಷಣ್ ರವರು ಕಾರ್ಯಕ್ರಮದ ಸ್ವರೂಪದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ ಡಿ, ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್, ಉಪನ್ಯಾಸಕರು, ಕಾಕೋಟುಪರಂಬು ಸರ್ಕಾರಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಮಡಿಕೇರಿ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಅಧಿಕಾರಿ ವಿಲೀನ ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಕೃತಿ ನಿರೂಪಿಸಿ, ಅಮೃತ ರಾವ್ ವಂದಿಸಿದರು.

ಯಶಸ್ವಿಯಾಗಿ ಜರುಗಿದ ರಕ್ತದಾನ ಶಿಬಿರ:
ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು. ಸೆಂಟ್ ಆನ್ಸ್ ಪದವಿ ಕಾಲೇಜಿನ 69 ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ರಕ್ತದಾನವನ್ನು ಮಾಡಿದರು.250 ಕ್ಕೂ ಅಧಿಕ ವಿದ್ಯಾರ್ಥಿಗಳು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಈ ಸಂದರ್ಭದಲ್ಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವೈದ್ಯರುಗಳು, ಸಿಬ್ಬಂದಿಗಳು ಹಾಗೂ ಕಾಕೋಟು ಪರಂಬು ಸರ್ಕಾರಿ ಆರೋಗ್ಯ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು, ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

coorg buzz
coorg buzz