ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ – ರಸ್ತೆ ಅವ್ಯವಸ್ಥೆ ಬಗ್ಗೆ ಬಿಸಿ ಬಿಸಿ ಚರ್ಚೆ..! – ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಹೇಳಿದ್ದೇನು..?

Share this post :

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಶೀಘ್ರ ರಸ್ತೆ ಕಾಮಗಾರಿ ಕೈಗೊಂಡು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಳೆ ನಿಂತು 20 ದಿನಗಳಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು. ಸರ್ಕಾರದಿಂದಲೂ ಸಹ ರಸ್ತೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿ ಕೈಗೊಂಡು ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡುವಂತೆ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಕೆಲಸಗಳು ತೃಪ್ತಿದಾಯಕವಾಗಿಲ್ಲ. ಮಳೆ ನಿಂತು 20 ದಿನವಾದರೂ ಕಾಮಗಾರಿಯನ್ನು ಕೈಗೊಳ್ಳದಿರುವುದು ಬೇಸರ ತರಿಸಿದೆ ಎಂದು ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಸರ್ಕಾರ ಹಣ ನೀಡಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸಿದ್ದಾಪುರ ರಸ್ತೆ ಕಾಮಗಾರಿ ಇನ್ನೂ ಸಹ ಪೂರ್ಣಗೊಳಿಸಿಲ್ಲ. ಮಾಕುಟ್ಟ ಸೇರಿದಂತೆ ಎಲ್ಲಾ ಕಡೆ ರಸ್ತೆಯನ್ನು ಸರಿಪಡಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಯಾಗಿದ್ದು, ಸಾರಿಗೆ ಸಂಚಾರ ಓಡಾಟಕ್ಕೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆ ಗುಂಡಿ ಮುಚ್ಚುವ ಕೆಲಸ ಆಗಬೇಕು ಎಂದು ಸೂಚಿಸಿದರು.
ಇನ್ನೂ ನಾಲ್ಕೈದು ತಿಂಗಳು ಮಾತ್ರ ರಸ್ತೆ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಲಿದೆ. ಆದ್ದರಿಂದ ರಸ್ತೆ ಕಾಮಗಾರಿ ಶೀಘ್ರ ಆರಂಭಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗಾಳಿಬೀಡು ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ಆಗಿ ಒಂದು ವಾರ ಕಳೆದಿದೆ. ಆದರೆ ಇದುವರೆಗೆ ಕಾಮಗಾರಿ ಆರಂಭಿಸಿಲ್ಲ ಏಕೆ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರನ್ನು ಪ್ರಶ್ನಿಸಿದರು.
ಯಾವುದೇ ಹೊಸ ಕಾಮಗಾರಿಗೆ ಆರಂಭಕ್ಕೆ ಭೂಮಿ ಪೂಜೆ ಮಾಡುತ್ತೇವೆ. ಆದರೆ 15-20 ದಿನ ಕಳೆದರೂ ಕಾಮಗಾರಿ ಆರಂಭವಾಗಿರುವುದಿಲ್ಲ. ಈ ರೀತಿ ಆದರೆ ಹೇಗೆ ಎಂದು ಡಾ.ಮಂತರ್ ಗೌಡ ಅವರು ಪ್ರಶ್ನಿಸಿದರು.
ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಸಾರ್ವಜನಿಕರಿಂದ ದೂರು ಬರದಂತೆ ನೋಡಿಕೊಳ್ಳುವುದು ಎಂಜಿನಿಯರ್ಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್ಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಸೇರಿದಂತೆ ವಿವಿಧ ಕೆಲಸಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯುವ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸವಿಸ್ತಾರ ವರದಿ ನೀಡಬೇಕು. ಸಚಿವ ಸಂಪುಟದಲ್ಲಿ ಅನುಮೋದನೆ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದರು.
ಅರಣ್ಯವನ್ನು ಸಂರಕ್ಷಣೆ ಮಾಡಬೇಕು. ಜೊತೆಗೆ ಸಾರ್ವಜನಿಕರಿಗೂ ಸಹ ಯಾವುದೇ ರೀತಿ ತೊಂದರೆ ನೀಡಬಾರದು, ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿ ಅವರು ಕರ್ತವ್ಯ ನಿರ್ವಹಿಸಬೇಕು ಎಂದು ಎನ್.ಎಸ್.ಭೋಸರಾಜು ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ಕೊಯನಾಡು ಶಾಲೆ ನಿರ್ಮಾಣಕ್ಕೆ ಜಾಗ ಮಂಜೂರಾತಿ ಯಾವ ಹಂತಕ್ಕೆ ತಲುಪಿದೆ ಎಂದು ಮಾಹಿತಿ ಪಡೆದರು.
ಈ ಬಗ್ಗೆ ಮಾಹಿತಿ ನೀಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಶೀಘ್ರ ಅನುಮತಿ ದೊರೆಯಲಿದೆ ಎಂದು ಅವರು ಹೇಳಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಮುಕ್ಕೋಡ್ಲು ಗ್ರಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಜಾಗ ಸೇರಿದೆ ಎಂದು ಏಲಕ್ಕಿ ಗಿಡಗಳನ್ನು ನಾಶ ಮಾಡಲಾಗಿದೆ. ಈ ರೀತಿ ಆದರೆ ರೈತರಿಗೆ ಆಗಿರುವ ನಷ್ಟ ಭರಿಸುವವರು ಯಾರು ಎಂದು ಅವರು ಪ್ರಶ್ನಿಸಿದರು.
ಈಗಾಗಲೇ ಏಲಕ್ಕಿ ಬೆಳೆದಿರುವ ಪ್ರದೇಶ ಕಂದಾಯ ಇಲಾಖೆ ಅಧಿಕಾರಿಗಳು ಪೈಸಾರಿ ಎಂದು ಹೇಳುತ್ತಾರೆ. ಆದರೆ ಅರಣ್ಯ ಇಲಾಖೆಯವರು ಅರಣ್ಯದ ಜಾಗ ಎಂದು ಹೇಳುತ್ತಾರೆ. ಆದ್ದರಿಂದ ಉಪ ವಿಭಾಗಾಧಿಕಾರಿ ಅವರ ನ್ಯಾಯಾಲಯದಲ್ಲಿ ಪರಿಹರಿಸುವಂತಾಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಅವರು ಸಭೆಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಏಲಕ್ಕಿ ಬೆಳೆದಿರುವ ಪ್ರದೇಶವು ಅರಣ್ಯ ಇಲಾಖೆಗೆ ಸೇರಿದೆ. ಯಾವುದೇ ದಾಖಲೆಯಲ್ಲಿ ಅರಣ್ಯ ಭೂಮಿ ಎಂದು ದಾಖಲಾಗಿದ್ದಲ್ಲಿ ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಶಾಸಕರಾದ ಡಾ.ಮಂತರ್ಗೌಡ ಅವರು ಕೃಷಿಕರು ಜಾಗ ಒತ್ತುವರಿ ಮಾಡಿಕೊಂಡಿದ್ದಲ್ಲಿ ಅರಣ್ಯ ಅಧಿಕಾರಿಗಳು ನೋಟೀಸ್ ನೀಡಬೇಕಲ್ಲವೇ, ಅದನ್ನು ಬಿಟ್ಟು ಏಲಕ್ಕಿ ಗಿಡಗಳನ್ನು ನಾಶ ಪಡಿಸಿರುವುದು ಏಕೆ ಎಂದು ವಿಡಿಯೊ ಚಿತ್ರ ಸಹಿತ ವಿವರಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಕೃಷಿ ಇಲಾಖೆಯಿಂದ ಕಾಲ ಮಿತಿಯೊಳಗೆ ಟಾರ್ಪಲ್ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮತ್ತು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 46 ಕಾಮಗಾರಿಗೆ, ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ 49 ಕಾಮಗಾರಿಗೆ ಆಡಳಿತಾತ್ಮಕ ಮಂಜೂರಾತಿ ದೊರೆತಿದೆ ಎಂದು ಮಾಹಿತಿ ನೀಡಿದರು.
ನಾಮ ನಿರ್ದೇಶಿತ ಸದಸ್ಯರಾದ ಸುನಿತಾ ಮಂಜುನಾಥ್ ಅವರು ಮಾತನಾಡಿ ಬಡವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಕೋರಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಸಿಗಬೇಕು. ಯಾವುದೇ ಕಾರಣಕ್ಕೂ ಹೊರಗಡೆಗೆ ಚೀಟಿ ಬರೆಯಬಾರದು ಎಂದು ತಾಕೀತು ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾತನಾಡಿ ಕ್ರಿಟಿಕಲ್ ಕೇರ್ ಸೆಂಟರ್ ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಯಾವುದೇ ರೀತಿ ದೂರು ಬರದಂತೆ ಗಮನಹರಿಸಬೇಕು ಎಂದು ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ ಗೌಡ ಅವರು ಈ ಬಾರಿ 22 ದಿನ ಮಳೆ ರಜೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸಿ ನಂಬರ್ ಒನ್ ಸ್ಥಾನಕ್ಕೆ ತರುವಂತೆ ಸೂಚಿಸಿದರು.
ಈ ಕುರಿತು ಮಾತನಾಡಿದ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಶನಿವಾರ ಪೂರ್ಣ ದಿನ ಶಾಲೆ ನಡೆಸಲಾಗುತ್ತಿದೆ. ಡಿಸೆಂಬರ್ ಒಳಗೆ ಪಠ್ಯಕ್ರಮದಂತೆ ಪಾಠ ಪ್ರವಚನ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಾಲ ಕಾಲಕ್ಕೆ ಮೌಲ್ಯಯುತ ಪರೀಕ್ಷೆ ನಡೆಸಬೇಕು. ವಿಶೇಷ ತರಗತಿ ನಡೆಸಿ ಹೆಚ್ಚಿನ ಫಲಿತಾಂಶಕ್ಕೆ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ನಲಿಕಲಿ ಯೋಜನೆ ಸೇರಿದಂತೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಲು ಕ್ರಮವಹಿಸಲಾಗಿದೆ ಎಂದರು.
ಜಿಲ್ಲೆಯ 13 ಕಡೆಗಳಲ್ಲಿ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣ ಕಾಮಗಾರಿ ವಿಳಂಬ ಮಾಡಬಾರದು. ವಿದ್ಯುತ್ ಉಪ ಕೇಂದ್ರ ಜಾಗ ಬೇಕಿದ್ದಲ್ಲಿ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡುವಂತೆ ಸೂಚಿಸಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ನಿರ್ವಹಣೆ ಸಮರ್ಪಕವಾಗಿ ನಡೆಯಬೇಕು. ವಿದ್ಯಾರ್ಥಿಗಳಿಗೆ ಸರಿಯಾಗಿ ಊಟೋಪಚಾರ ಒದಗಿಸಬೇಕು. ದೂರು ಬರದಂತೆ ಗಮನಹರಿಸುವಂತೆ ಸಚಿವರು ತಾಕೀತು ಮಾಡಿದರು.
ಆದಿವಾಸಿ ಕುಟುಂಬದವರಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಅವರನ್ನು ತಾಲ್ಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗೆ ಕರೆದುಕೊಂಡು ಬಂದು ಆಧಾರ್ ಕಾರ್ಡ್ ಮಾಡಿಸುವುದು ಐಟಿಡಿಪಿ ಇಲಾಖಾ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸೂಚಿಸಿದರು.
ಆಧಾರ್ ಕಾರ್ಡ್ ಇಲ್ಲದೆ ಸರ್ಕಾರದ ಸೌಲಭ್ಯವನ್ನು ತಲುಪಿಸುವುದು ಕಷ್ಟಸಾಧ್ಯವಾಗಿದೆ. ಕಾಲಮಿತಿಯಲ್ಲಿ ಆಧಾರ್ ಕಾರ್ಡ್ ಮಾಡಿಸುವಂತೆ ಸಚಿವರು ನಿರ್ದೇಶನ ನೀಡಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಜಿಲ್ಲೆಯ 228 ಕಾಲೋನಿಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ. ತಮ್ಮ ಸೂಚನೆಯಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಶಾಸಕರಾದ ಮಂತರ್ ಗೌಡ ಅವರು ಮೂರು ತಿಂಗಳಿನಿಂದ ಅರ್ಹ ಆದಿವಾಸಿಗಳಿಗೆ ಆಹಾರ ಕಿಟ್ ವಿತರಿಸಿಲ್ಲ, ಆದಿವಾಸಿಗಳು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
‘ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಏನು ಬೇಕಾದರೂ ಮಾಡಿದರೆ, ಹೇಗೆ ಬೇಕಾದರೂ ನಡೆದುಕೊಂಡರೆ ನಡೆಯುತ್ತದೆ ಎಂಬ ಮನೋಭಾವ ಅಧಿಕಾರಿಗಳಲ್ಲಿ ಇರಬಾರದು. ಕೃತಜ್ಞತಾ ಭಾವ ಇರಬೇಕು ಎಂದು ಸಲಹೆ ಮಾಡಿದರು.’
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ನಗರ, ಪಟ್ಟಣ ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಕಾಲ ಮಿತಿಯಲ್ಲಿ ಪರಿಶೀಲಿಸಿ ಅನುಮತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡಿದರು.
ಈ ಕುರಿತು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಧ್ವನಿಗೂಡಿಸಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ನಗರ ಪಟ್ಟಣ ಯೋಜನಾ ಇಲಾಖೆ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಮನೆ ನಿರ್ಮಿಸಲು ಅನುಮತಿ ನೀಡಲು ಬಾಕಿ ಎಷ್ಟು ಅರ್ಜಿಗಳು ಇವೆ ಎಂದು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯೊಬ್ಬರು 80 ಕ್ಕೂ ಹೆಚ್ಚು ಅರ್ಜಿಗಳು ಇವೆ ಎಂದು ಮಾಹಿತಿ ನೀಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯ ಕಡಮಕಲ್ಲು ಗ್ರಾಮದಲ್ಲಿ 40 ರಿಂದ 50 ಕುಟುಂಬಗಳು ವಾಸ ಮಾಡುತ್ತಿದ್ದು, ಪಡಿತರ ವಿತರಿಸಲು ಪ್ರತೀ ಕಾರ್ಡ್ದಾರರಿಂದ 150 ರೂ. ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಸಂಬಂಧಪಟ್ಟವರ ವಿರುದ್ದ ಕೂಡಲೇ ಕ್ರಮವಹಿಸುವಂತೆ ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಕಾವೇರಿ ನೀರಾವರಿ ನಿಗಮದ ಕಾಮಗಾರಿಯನ್ನು ಆದಷ್ಟು ಶೀಘ್ರ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಸಂಬಂಧಿಸಿದಂತೆ ಸಚಿವರು ಮಾಹಿತಿ ಪಡೆದರು.
ಸುವರ್ಣ ಕರ್ನಾಟಕ ಸಮುಚ್ಚಯ ಭವನ ಇದುವರೆಗೆ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 3 ಕೋಟಿ ರೂ. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.
ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಅವರು ರಸ್ತೆ ಸರಿಪಡಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಮಡಿಕೇರಿ ನಗರ ರಸ್ತೆ ಸರಿಪಡಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಸಚಿವರಲ್ಲಿ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ ಗೌಡ ಅವರು ಶಾಸಕರ ಅನುದಾನದಡಿ ಪ್ರಥಮ ಬಾರಿಗೆ ಮಡಿಕೇರಿ ನಗರಸಭೆಗೆ 3 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ ಎಂದು ತಿಳಿಸಿದರು.
ನಾಮ ನಿರ್ದೇಶಿತ ಸದಸ್ಯರಾದ ಸುರೇಶ್, ಲವ ಚಿಣ್ಣಪ್ಪ, ಅಬ್ದುಲ್ ರೆಹಮಾನ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಉಪಕಾರ್ಯದರ್ಶಿ ಚಂದ್ರಶೇಖರ್, ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಜೀವನ್ ಕುಮಾರ್ ಇತರರು ಇದ್ದರು. ಜಿ.ಪಂ.ಸಿಬ್ಬಂದಿಗಳು ನಾಡಗೀತೆ ಹಾಡಿದರು. ಪವನ್ ಕುಮಾರ್ ನಿರೂಪಿಸಿ, ವಂದಿಸಿದರು.

coorg buzz
coorg buzz