ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ ಮಾಡಲಾಗಿದೆ. 19ರ ಒಳಗೆ ಸಮೀಕ್ಷೆ ಮುಗಿಯಲಿದೆ ಅಂತ ಶಿಕ್ಷಕರ ಸಂಘದವರು ತಿಳಿಸಿದ್ದಾರೆ. ಈ ಅವಧಿಯಲ್ಲಿ ನಷ್ಟವಾಗುವ ತರಗತಿಗಳನ್ನು ವಿಶೇಷ ಬೋಧನಾ ತರಗತಿಗಳ ಮೂಲಕ ಪೂರ್ಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.
12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.
ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದರು.



