ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಹೇಳಿದ್ದಾರೆ.
ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಂಪುಟ ಪುನಾರಚನೆಯನ್ನೇ ‘ಕ್ರಾಂತಿ’ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಪ್ರಸ್ತುತ, ಅನಗತ್ಯ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ವರಿಷ್ಠರು ಶಾಸಕರ ಅಭಿಪ್ರಾಯವನ್ನೂ ಪಡೆದಿಲ್ಲ. ಇದೆಲ್ಲಾ ಕೇವಲ ಊಹಾಪೋಹಗಳಷ್ಟೇ. ಇಂತಹ ಚರ್ಚೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಶಕ್ತಿಯೇ ನಮ್ಮ ನಾಯಕತ್ವ. ಇದೇ ಕಾರಣಕ್ಕೆ ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದೆ. ಮುಂದೆಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
ಸಿದ್ದರಾಮಯ್ಯ ಅವರು ಸರ್ಕಾರವನ್ನು ಚೆನ್ನಾಗಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಪರಮೇಶ್ವರ್ ಎಲ್ಲರೂ ನಮಗೆ ಮುಖ್ಯ ಅಂತ ಹೇಳಿದ್ರು.



