ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಡಾ.ಮಂತರ್ ಗೌಡ ಮಾತನಾಡಿ, ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ ಕಾರ್ಯವಾಗಬೇಕು ಎಂದರು.
ಹಣ ಬಿಡುಗಡೆ ಸಂಬಂಧ ಮುಖ್ಯಮಂತ್ರಿಯವರು, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಭೇಟಿ ಮಾಡಲು ನಿಯೋಗ ತೆರಳಲಾಗುವುದು. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಡಾ.ಮಂತರ್ ಗೌಡ ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಮಡಿಕೇರಿ ದಸರಾವು ನಾಡಿನ ಸಂಸ್ಕೃತಿ ಬಿಂಬಿಸುತ್ತದೆ. ಒಳ್ಳೆಯ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವುದು, ಮಹಿಳಾ, ಮಕ್ಕಳ, ಯುವ ಮತ್ತು ಕ್ರೀಡಾ ದಸರಾ ಆಚರಿಸುವುದು ಸೇರಿದಂತೆ ವಿವಿಧ ರೀತಿಯ ದಸರಾ ಆಚರಿಸುವುದು ವಿಶೇಷವಾಗಿದ್ದು, ಆ ದಿಸೆಯಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ರಾತ್ರಿ ವೇಳೆಯಲ್ಲಿ ನಡೆಯುವ ಮಡಿಕೇರಿ ದಸರಾಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಆ ನಿಟ್ಟಿನಲ್ಲಿ ಜನರ ಸುರಕ್ಷತೆ ಅತೀ ಮುಖ್ಯ. ಆಸ್ತಿ ಪಾಸ್ತಿ ಹಾನಿಯಾಗದಂತೆ ಗಮನಹರಿಸುವುದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಸಾರಿಗೆ ಸಂಚಾರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು, ಮತ್ತಿತರ ಕ್ರಮಗಳನ್ನು ಪೊಲೀಸ್ ಇಲಾಖೆ ವಹಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ದಶಮಂಟಪಗಳ ಸ್ಪರ್ಧೆ ಇರುವುದರಿಂದ ಪೈಪೋಟಿ ಹೆಚ್ಚಾಗಿದೆ. ಸ್ಪರ್ಧೆ ಇಲ್ಲದಿದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.



