ಮಡಿಕೇರಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂದ್ಯ ತಿಳಿಸಿದ್ದಾರೆ.
ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು ಅಭಿವೃದ್ದಿಯತ್ತ ಮುನ್ನಡೆಯಬೇಕು ಎಂದು ಸಲಹೆ ಮಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸ್ಥಳೀಯ ಸಂಘಟನೆಗಳಿಗೂ ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಖರ್ಚು ವೆಚ್ಚದ ಸಮಗ್ರ ದಾಖಲೆ ಒದಗಿಸಬೇಕು ಎಂದು ಪಿಜಿಆರ್ ಸಿಂಧ್ಯ ತಿಳಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನ ಬಿಡುಗಡೆ ಆಗಲಿದೆ. ಆ ನಿಟ್ಟಿನಲ್ಲಿ ಹುರುಪಿನಿಂದ ವಿವಿಧ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಆದಿವಾಸಿ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸಂಬಂಧ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಸಂಸ್ಥೆಯ ಸಹ ಆಯುಕ್ತ ಬಸವರಾಜ್, ರಾಜ್ಯ ಸಂಘಟಕ ಪ್ರಭಾಕರ ಭಟ್, ಟಿ.ಜಿ. ಪ್ರೇಮ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಜ್ಯೋತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಜಿಲ್ಲಾ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಕಾರ್ಯದರ್ಶಿ ಎಂ.ಎಂ. ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಮುಂತಾದವರಿದ್ದರು.
