ಮಡಿಕೇರಿ : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗಿದ್ದು, ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ಯಾತ್ರೆ’ ನಡೆಯಿತು. ದೇಶವನ್ನು ವಿಭಜಿಸುತ್ತಿರುವ ಶಕ್ತಿಗಳು ವಿಜೃಂಭಿಸುತ್ತಿರುವ ಈ ಸಮಯದಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಪಕ್ಷದ ಪ್ರಮುಖರು ಹೇಳಿದರು.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಿಂದ ಆರಂಭವಾದ ಕಾಲ್ನಡಿಗೆ ಜಾಥಾಗೆ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಜನರಲ್ ತಿಮ್ಮಯ್ಯ ವೃತ್ತದವರೆಗೆ ಜಾಥಾ ಸಾಗಿತು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಏಕತಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಕೆ.ಜಿ ಬೋಪಯ್ಯ, ಭಾರತವನ್ನು ಒಗ್ಗೂಡಿಸುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕನಸಿನಂತೆ ಬಿಜೆಪಿ ಕೆಲಸ ಮಾಡುತ್ತಿದೆ. ಒಗ್ಗಟ್ಟು ಮತ್ತು ಸಮಗ್ರತೆಯ ಸಂದೇಶವನ್ನು ಬಿಜೆಪಿ ಸಾರುತ್ತಿದೆ. ಅಕ್ಟೋಬರ್ 25ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅಪ್ಪಚ್ಚು ರಂಜನ್ ಮಾತನಾಡಿ, ಪಟೇಲರು ಅಖಂಡ ಭಾರತದ ಗುರಿ ಹೊಂದಿದ್ದರು ಎಂದಿ ಹೇಳಿದರು.
ಯಾತ್ರೆಯಲ್ಲಿ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮುಖಂಡರಾದ ಮನು ಮುತ್ತಪ್ಪ, ವಿ.ಕೆ. ಲೋಕೇಶ್, ಬಿ.ಬಿ. ಭಾರತೀಶ್, ಅನಿತಾ ಪೂವಯ್ಯ, ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.



