ವಿರಾಜಪೇಟೆ: ಸಮಾಜದಲ್ಲಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿ ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಚಂದ್ರಶೇಖರ್ ಎನ್. ಸಿ. ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೆಚ್ ಐ ವಿ /ಏಡ್ಸ್ ಅರಿವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದರು. ವಿದ್ಯಾರ್ಥಿಗಳು ಹೆಚ್ ಐ ವಿ /ಏಡ್ಸ್ ನ ಬಗ್ಗೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಂಪೂರ್ಣವಾಗಿ ಸಾಧ್ಯ. 2030 ರ ವೇಳೆಗೆ ಹೆಚ್ ಐ ವಿ ಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿ ಹೊಂದಲಾಗಿದ್ದು ರೆಡ್ ರಿಬ್ಬನ್ ಕ್ಲಬ್ ಗಳ ಪಾತ್ರವು ಅದರಲ್ಲಿ ಬಹಳಷ್ಟಿದೆ. ಏಡ್ಸ್ ಮಾರಕ ಕಾಯಿಲೆ ಎಂಬುವುದಕ್ಕಿಂತ ಅದರ ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ರವರು ಮಾತನಾಡಿ ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಅಪಾರವಾಗಿದ್ದು ಯುವ ಜನತೆ ತಾವು ಶಿಕ್ಷಣವನ್ನು ಪಡೆದು ಸಮಾಜದಲ್ಲಿ ತಾವು ಕಲಿತದನ್ನು ಅರಿವು ಮೂಡಿಸಿ ಎಂದರು. ಏಡ್ಸ್ ನಿಯಂತ್ರಣಕ್ಕೆ ಸರ್ಕಾರ, ಆರೋಗ್ಯ ಇಲಾಖೆ ಪ್ರಯತ್ನವನ್ನು ಪಡುತಿದ್ದು ಸಾರ್ವಜನಿಕ ಜಾಗೃತಿ ಮೂಡಿಸಬೇಕಾದ ಕರ್ತವ್ಯ ಪ್ರತಿಯೊಬ್ಬರದ್ದಾಗಿದೆ ಎಂದು ಹೇಳಿದರು.
ಕಾಲೇಜಿನ ಎನ್. ಎಸ್. ಎಸ್. ಅಧಿಕಾರಿ ಹಾಗೂ ರೆಡ್ ರಿಬ್ಬನ್ ಕ್ಲಬ್ ನ ಅಧಿಕಾರಿ ಬಿ. ಎನ್. ಶಾಂತಿಭೂಷಣ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ರವರು ಸ್ವಾಗತಿಸಿ, ವಿದ್ಯಾರ್ಥಿನಿ ಮೇಘನ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪೋಸ್ಟರ್ ಮೇಕಿಂಗ್ ಸ್ಪರ್ಧೆ ಆಯೋಜನೆ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ :ರೆಡ್ ರಿಬ್ಬನ್ ಕ್ಲಬ್ ನ ವತಿಯಿಂದ ವಿದ್ಯಾರ್ಥಿಗಳಿಗೆ ಹೆಚ್ ಐ ವಿ /ಏಡ್ಸ್ ಕುರಿತು ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ದ್ವಿತೀಯ ಬಿ ಬಿ ಎ ತಂಡ ಪ್ರಥಮ ಸ್ಥಾನ, ದ್ವಿತೀಯ ಬಿ. ಕಾಂ ತಂಡ ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ. ಕಾಂ ತಂಡ ತೃತೀಯ ಬಹುಮಾನವನ್ನು ಪಡೆದುಕೊಂಡಿತು.



