ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಗಳವಾರ ನಡೆದ ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಆಧ್ಯತೆಯ ಮೇರೆಗೆ ಕ್ರಮವಹಿಸಿ ಕಳೆದ ಐದು ವರ್ಷಗಳ ಪ್ರಕರಣಗಳ ಅವಲೋಕನ ನಡೆಸಿ ಅತೀ ಹೆಚ್ಚು ಪ್ರಕರಣಗಳು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಂತಹ ಪ್ರದೇಶದಲ್ಲಿ ಹೆಚ್ಚಿನ ಅರಿವು ಹಾಗೂ ಕಾನೂನುಗಳ ಕುರಿತು ಪ್ರಚಾರ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಇವರು ಸೂಚಿಸಿದರು. ಶಾಲೆಯಿಂದ ಹೊರಗುಳಿದ ಮಕ್ಕಳು ಹೆಚ್ಚಾಗಿ ಬಾಲ್ಯವಿವಾಹ ಹಾಗೂ ಪೋಕ್ಸೋ ಸಂತ್ರಸ್ಥರಾಗಿ ಕಂಡುಬರುತ್ತಿದ್ದು, ಇದನ್ನು ತಡೆಗಟ್ಟಲು ಶಾಲೆಯಿಂದ ಮಕ್ಕಳು ಹೊರಗುಳಿದ ತಕ್ಷಣ ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯಮಾನುಸಾರ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ಪೋಕ್ಸೋ ಸಂತ್ರಸ್ಥ ಮಕ್ಕಳಿಗೆ ಪ್ರಕರಣ ದಾಖಲಾದ ತಕ್ಷಣ ಪರಿಹಾರ ಒದಗಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕ್ರಮವಹಿಸವಂತೆ ಸೂಚಿಸಿದರು.
ಬಾಲ್ಯ ವಿವಾಹ ಮುಕ್ತ ಕೊಡಗಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಪ್ರಾಥಮಿಕ ಹಂತವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಯಾರಿಸಲಾಗಿರುವ ಭಿತ್ತಿ ಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ದಿನೇಶ್ ಕುಮಾರ್ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಶೀರಾಜ್ ಅಹಮದ್ ಇತರರು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೃಷ್ಣಮೂರ್ತಿ ಆರ್ ಅವರು ಸ್ವಾಗತಿಸಿ, ವಂದಿಸಿದರು.



